ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ ಆರೋಪ; ಎಡಿಜಿಪಿ ಅಲೋಕ್ ಕುಮಾರ್​ ವಿರುದ್ಧ ಇಲಾಖಾ ತನಿಖೆಗೆ ತಡೆ ನೀಡಿದ ಸಿಎಟಿ


ಬೆಂಗಳೂರು : ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್​ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಧ್ಯಂತರ ತಡೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸುವಂತೆ ಕೋರಿ ಎಡಿಜಿಪಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಕೆ. ಶ್ರೀವಾಸತ್ಸವ ಅವರ ಪೀಠವು ಈ ಆದೇಶ ಮಾಡಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿದೆ.

ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ 2019ರಲ್ಲಿ ಕೇಳಿಬಂದಿದ್ದ ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ(ಫೋನ್ ಟ್ಯಾಪಿಂಗ್)ಯ ಪ್ರಕರಣದ ಕುರಿತು ಇಲಾಖಾ ವಿಚಾರಣೆ ನಡೆಸುವಂತೆ 2025ರ ಮೇ 9ರಂದು ಮುಖ್ಯ ಕಾರ್ಯದರ್ಶಿ ನೋಟಿಸ್ ನೀಡಿದ್ದರು. ಅದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದರು.

ಅಲೋಕ್ ಕುಮಾರ್ ಪರ ವಕೀಲರು, ಇದೇ ಪ್ರಕರಣ ಸಂಬಂಧ ಈ ಹಿಂದೆ ಅರ್ಜಿದಾರರ ವಿರುದ್ಧ ಆರೋಪ ಮಾಡಲಾಗಿತ್ತು. ಈ ಹಿಂದೆ ಸಿಬಿಐ ತನಿಖಾಧಿಕಾರಿಗಳು ಇದೇ ಪ್ರಕರಣವನ್ನು ಮುಕ್ತಾಯಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಸದ್ಯ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡುವುದನ್ನು ತಡೆಹಿಡಿಯುವ ಉದ್ದೇಶದಿಂದ ಹಳೆಯ ಆರೋಪಗಳ ಮೇಲೆ ಮತ್ತೆ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅರ್ಜಿಯನ್ನು ಇತ್ತೀಚೆಗೆ ವಿಚಾರಣೆ ನಡೆಸಿದ ಬೆಂಗಳೂರಿನ ಸಿಎಟಿ ಪೀಠ, ಅಲೋಕ್ ಕುಮಾರ್ ವಿರುದ್ಧದ ನೋಟಿಸ್​ಗೆ ಜೂ.10ರವರೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದೆ. ಜೊತೆಗೆ, ಅರ್ಜಿಯನ್ನು ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ಕಚೇರಿಗೆ ನಿರ್ದೇಶಿಸಿ ಆದೇಶಿಸಿದೆ.


Leave a Comment

Your email address will not be published. Required fields are marked *