21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ, ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ.


ಬೆಂಗಳೂರು: 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.

ರಾಷ್ಟ್ರಪತಿಗಳ ಅಂಕಿತದ ನಂತರ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.‌ ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಸಿಗರೇಟು ಅಥವಾ ಯಾವುದೇ ಇತರ ತಂಬಾಕು ಉತ್ಪನ್ನದ ಮಾರಾಟ ಮಾಡುವಂತಿಲ್ಲ. ಅಥವಾ ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ.‌ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ‌. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ.


Leave a Comment

Your email address will not be published. Required fields are marked *