
ಚನ್ನಮ್ಮನ ಕಿತ್ತೂರು: ಅಂತರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ-2025 ನೇ ಪ್ರಯುಕ್ತವಾಗಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರಕಾರಿ ವಸ್ತುಸಂಗ್ರಹಾಲಯ ಹಾಗೂ ಕಿತ್ತೂರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತುಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ,ಯ ಮೇ 18 ರಂದು ಬೆಳಿಗ್ಗೆ 10 ಗಂಟೆಗೆ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳೊಂದಿಗೆ ಕಿತ್ತೂರು ಇತಿಹಾಸಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ವಿತರಣೆ ಮಾಡಲಾಗುವುದು ಎಂದು ವಸ್ತುಸಂಗ್ರಹಾಲಯದ ಕ್ಯೂರೇಟರ ರಾಘವೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಸಮಾರಂಭವನ್ನು ಶಾಸಕ ಬಾಬಾಸಾಹೇಬ ಪಾಟೀಲ ಅವರು ಉದ್ಘಾಟಿಸಲಿದ್ದು, ಕಿತ್ತೂರು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಸ್.ಬಿ. ದಳವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವೈ. ತುಬಾಕದ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನ್ನವರ ಪ್ರಮುಖ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಚನ್ನಮ್ಮನ ಕಿತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಮಕೃಷ್ಣ ಇಳಕಲ್ ಉಪನ್ಯಾಸ ನೀಡಲಿದ್ದು, ಈ ವಿಷಯಕ್ಕೆ ತೀವ್ರವಾದ ಆಸಕ್ತಿಯುಳ್ಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮದ ಆಯೋಜಕರು ಮನವಿ ಮಾಡಿದ್ದಾರೆ.




